ಹುಬ್ಬಳ್ಳಿ: ಖಾಸಗಿ ಬಸ್ ಮಗುಚಿ 14 ಜನ ಪ್ರಯಾಣಿಕರು ಗಾಯಗೊಂಡ ಘಟನೆ ಪಾಳ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಬೆಂಗಳೂರಿನಿಂದ ಬೆಳಗಾವಿಗೆ ಹೋಗುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿದೆ ಎಂದು ಪೊಲೀಸರು ತಿಳಿಸಿದ್ದಾರೆ.
11 ಜನ ಪ್ರಯಾಣಿಕರು ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.