ನವದೆಹಲಿ: ಜುಲೈ 17 ಮತ್ತು 18 ರಂದು ಬೆಂಗಳೂರಿನಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾಗವಹಿಸಲಿದ್ದು, 24 ಪಕ್ಷಗಳು ಭಾಗವಹಿಸಲಿವೆ ಎಂದು ಮೂಲಗಳು ಬುಧವಾರ ತಿಳಿಸಿವೆ.
ಮೂಲಗಳ ಪ್ರಕಾರ, ಎಂಡಿಎಂಕೆ, ಕೆಡಿಎಂಕೆ, ವಿಸಿಕೆ, ಆರ್‌ಎಸ್‌ಪಿ, ಫಾರ್ವರ್ಡ್ ಬ್ಲಾಕ್, ಐಯುಎಂಎಲ್, ಕೇರಳ ಕಾಂಗ್ರೆಸ್ (ಜೋಸೆಫ್), ಮತ್ತು ಕೇರಳ ಕಾಂಗ್ರೆಸ್ (ಮಣಿ) ಪಕ್ಷಗಳಿಗೂ ಆಹ್ವಾನ ನೀಡಲಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಆಹ್ವಾನ ನೀಡಿದ್ದು, ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ಸೋನಿಯಾ ಒಪ್ಪಿಕೊಂಡಿದ್ದಾರೆ.
ಜೂನ್ 23 ರಂದು ಪಾಟ್ನಾದಲ್ಲಿ ನಡೆದ ಮೊದಲ ಸಭೆಯಲ್ಲಿ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಪಾಲ್ಗೊಂಡಿದ್ದರು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೊದಲು ತಮ್ಮ ನಿವಾಸದಲ್ಲಿ ತಮ್ಮ ನಿವಾಸದಲ್ಲಿ ಸಭೆ ನಡೆಸಿದ್ದು, 2024 ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ವಿರುದ್ಧದ ಕಾರ್ಯತಂತ್ರವನ್ನು ರೂಪಿಸಲು ವಿವಿಧ ಪಕ್ಷಗಳನ್ನು ಒಂದೇ ವೇದಿಕೆಗೆ ಕರೆತರುವ ಮೊದಲ ಯತ್ನ ನಡೆಸಿದ್ದರು. ಅಂದಿನ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಎನ್‌ಸಿ ನಾಯಕ ಒಮರ್ ಅಬ್ದುಲ್ಲಾ ಮತ್ತು ಇತರರು ಸಭೆಯಲ್ಲಿ ಭಾಗವಹಿಸಿದ್ದರು. .