ಪುತ್ತೂರು: ಪುತ್ತೂರಿನಲ್ಲಿ ಬಿಜೆಪಿಗೆ ಅರುಣ್ ಪುತ್ತಿಲ ಬಣದ ಸಮಸ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ನಳಿನ್ ಕುಮಾರ್ ಕಟೀಲ್, ಯಾರೆಲ್ಲಾ ಪಕ್ಷಕ್ಕೆ ಸೇರ್ಪಡೆಯಾಗಬೇಕು ಎಂಬುದನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುತ್ತದೆ. ಪುತ್ತಿಲ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ನಾಯಕರು ಈಗಾಗಲೇ ಚರ್ಚೆ ನಡೆಸಿದ್ದಾರೆ. ಗ್ರಾಮಪಂಚಾಯತ್ ಉಪ ಚುನಾವಣೆಯಲ್ಲಿ ಬಿಜೆಪಿ ಸ್ಪರ್ಧಿಸಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಕೂಡಾ ಚುನಾವಣೆಗೆ ಸ್ಪರ್ಧಿಸಬಹುದು. ಅದೇ ಆಧಾರದಲ್ಲಿ ಪುತ್ತಿಲ ಪರಿವಾರ ಕೂಡ ಸ್ಪರ್ಧೆ ನಡೆಸಿದೆ ಎಂದರು.
ಕೇಂದ್ರ ನಾಯಕರು ವಿಧಾನಸಭಾ ವಿರೋಧ ಪಕ್ಷ ನಾಯಕನ ಆಯ್ಕೆ ವಿಚಾರ ನಿರ್ಧಾರ ಮಾಡುತ್ತಾರೆ. ಸೂಕ್ತ ಸಂದರ್ಭದಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಬಿಜೆಪಿಯಲ್ಲಿ 62 ಶಾಸಕರೂ ಕೂಡ ಸಮರ್ಥರಿದ್ದಾರೆ. ರಾಜ್ಯ ಸರಕಾರದ ಜನವಿರೋಧಿ ನೀತಿಗಳನ್ನು ಎಲ್ಲಾ ರೀತಿಯಲ್ಲೂ ಪ್ರಶ್ನಿಸುತ್ತಿದ್ದಾರೆ ಎಂದು ತಿಳಿಸಿದರು.