ಬೆಂಗಳೂರು: ಇಂದಿನಿಂದ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ನಾಲ್ಕು ದಿನ ಕರಾವಳಿ ಭಾಗದಲ್ಲಿ ಗಾಳಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಮುಂದಿನ ನಾಲ್ಕು ದಿನ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಒಳನಾಡು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಸಾಧಾರಣ ಮಳೆಯಾಗಲಿದೆ. ಆದರೆ ಶಿವಮೊಗ್ಗ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ದಿನಾಂಕ ಜು.20 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.