ಬೆಂಗಳೂರು : ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ನ ಹಿರಿಯ ನಾಯಕ ಉಮ್ಮನ್ ಚಾಂಡಿ (79) ಬೆಂಗಳೂರಿನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಅವರನ್ನು ಕಳೆದ ಫೆಬ್ರವರಿ 12ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಉಮ್ಮನ್ ಚಾಂಡಿ 1943, ಅಕ್ಟೋಬರ್ 31ರಂದು ಕೇರಳದ ಕೊಟ್ಟಾಯಂ ಜಿಲ್ಲೆಯ ಕುಮಾರಕೋಮ್‌ನಲ್ಲಿ ಜನಿಸಿದ್ದು, ಸರ್ಕಾರಿ ಕಾನೂನು ಕಾಲೇಜಿನಿಂದ ಎಲ್‌ಎಲ್‌ಬಿ ಪದವಿ ಪೂರೈಸಿದ್ದರು.
ಕೇರಳ ವಿದ್ಯಾರ್ಥಿ ಒಕ್ಕೂಟದ ಮೂಲಕ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿ 1967ರಲ್ಲಿ ಕೇರಳ ವಿದ್ಯಾರ್ಥಿ ಒಕ್ಕೂಟದ ರಾಜ್ಯಾಧ್ಯಕ್ಷರಾದ್ದರು.ಕಾಂಗ್ರೆಸ್ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಿದ್ದ ಉಮ್ಮನ್ ಚಾಂಡಿ 1969ರಲ್ಲಿ ಯುವ ಕಾಂಗ್ರೆಸ್‌ನ ರಾಜ್ಯಾಧ್ಯಕ್ಷರಾದ್ದರು.
ಉಮ್ಮನ್ ಚಾಂಡಿ 2004ರಿಂದ 2006 ಹಾಗೂ 2011ರಿಂದ 2016ರ ವರೆಗೆ ಕೇರಳದ ಮುಖ್ಯಮಂತ್ರಿಯಾಗಿದ್ದರು. ಉಮ್ಮನ್ ಚಾಂಡಿ 1970ರಲ್ಲಿ ಪುತ್ತುಪಳ್ಳಿ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದರು. ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ಸಾರ್ವಜನಿಕ ಸೇವೆಯಲ್ಲಿನ ಭ್ರಷ್ಟಾಚಾರವನ್ನು ತಡೆಗಟ್ಟಲು ಶ್ರಮಿಸಿದ್ದ ಉಮ್ಮನ್ ಚಾಂಡಿಗೆ 2013 ರಲ್ಲಿ ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.