main logo

‘ದೇಶ ಪ್ರೇಮ ಒಬ್ಬರದ್ದೇ ಸ್ವತ್ತಲ್ಲ – ನೈತಿಕ ಪೊಲೀಸ್ ಗಿರಿ ಸಹಿಸೋದಿಲ್ಲ’- ಸಚಿವ ಗುಂಡೂರಾವ್

‘ದೇಶ ಪ್ರೇಮ ಒಬ್ಬರದ್ದೇ ಸ್ವತ್ತಲ್ಲ – ನೈತಿಕ ಪೊಲೀಸ್ ಗಿರಿ ಸಹಿಸೋದಿಲ್ಲ’- ಸಚಿವ ಗುಂಡೂರಾವ್

ನೆಹರೂ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಜಿಲ್ಲಾ ಉಸ್ತುವಾರಿ ಸಚಿವರ ಮಾತು

ಮಂಗಳೂರು:  76ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.15ರಂದು ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ‘ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುಂಚೆ ಕರಾವಳಿ ಸೇರಿದಂತೆ ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಿದ್ದವು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಇಂತಹ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಹೇಳಿದರು.

‘ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದಂತೆಯೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ನಮ್ಮ ಸರಕಾರ ಕಟಿಬದ್ಧವಾಗಿದೆ’ ಎಂದು ಸಚಿವ ಗುಂಡೂರಾವ್ ಇದೇ ಸಂದರ್ಭದಲ್ಲಿ ತಿಳಿಸಿದರು.

ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿಗಳನ್ನು ಹರಡುವ ಸೌಹಾರ್ದತೆ ಕೆಡಿಸುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರಲ್ಲದೇ, ದೇಶ ಪ್ರೇಮವೆಂಬುದು ಪಕ್ಷ, ವ್ಯಕ್ತಿ ಅಥವಾ ಸಂಘಟನೆಗೆ ಮಾತ್ರ ಸೀಮಿತವಾದುದಲ್ಲ ಎಂದು ಸಚಿವರು ಇದೇ ಸಂದರ್ಭದಲ್ಲಿ ಹೇಳಿದರು.

ಇವತ್ತಿನ ದಿನ ‘ಅವರ ದೇಶ ಪ್ರೇಮ ಹೆಚ್ಚು ಇವರದ್ದು ಕಡಿಮೆ’ ಎಂಬ ಮನೋಭಾವವನ್ನು ಜನರಲ್ಲಿ ಬಿತ್ತಲಾಗುತ್ತಿದೆ ಆದರೆ ಇದು ತಪ್ಪು ಕಲ್ಪನೆಯಾಗಿದ್ದು ದೇಶವನ್ನು ಭದ್ರಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಸಚಿವರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು.

ಜನರ ವಿಶ್ವಾಸವನ್ನು ಗಳಿಸಿಕೊಂಡು ಸಮಾಜದಲ್ಲಿ ಕಾನೂನನ್ನು ರಕ್ಷಿಸುವ ಕೆಲಸವನ್ನು ನಮ್ಮ ಸರಕಾರ ಮಾಡಲಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್,  ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಎಸ್ಪಿ ರಿಷ್ಯಂತ್ ಸೇರಿದಂತೆ ಜಿಲ್ಲೆಯ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

error: Content is protected !!