ಚಿತ್ರದುರ್ಗ: ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಎ) ರಲ್ಲಿ ಸರ್ಕಾರಿ ಬಸ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಐವರು ಮೃತಪಟ್ಟಿದ್ದಾರೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಸಾರಿಗೆ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ನಿಧರಾಗಿದ್ದಾರೆ. ಮತ್ತೊಬ್ಬರು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಐವರಿಗೆ ಗಾಯಗಳಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರಲ್ಲಿ, ಮೂವರ ಗುರುತು ಪತ್ತೆಯಾಗಿದ್ದು, ಇನ್ನಿಬ್ಬರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಮೃತರನ್ನು ರಾಯಚೂರಿನ ಮಾಬಮ್ಮ(35), ಮಸ್ಕಿ ಮೂಲದ ರಮೇಶ್(40), ಬೆಂಗಳೂರು ಮೂಲದ ಪಾರ್ವತಮ್ಮ(45) ಎಂದು ಗುರುತಿಸಲಾಗಿದೆ.
ಇನ್ನು, ಅಪಘಾತದ ಬಳಿಕ ಲಾರಿ ಚಾಲಕ ಲಾರಿ ಸಮೇತ ಅಪಘಾತ ಸ್ಥಳದಿಂದ ಪರಾರಿಯಾಗಿದ್ದಾನೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.