Site icon newsroomkannada.com

ಅಹಂಕಾರಿ ಸಚಿವರ ವಿರುದ್ಧ ಆಕ್ರೋಶ: ರಾಜೀನಾಮೆ ಬೆದರಿಕೆಯೊಡ್ಡಿದ ಆಳಂದ ಶಾಸಕ

ಬೆಂಗಳೂರು: ಸಚಿವರ ಕಾರ್ಯವೈಖರಿಯಿಂದ ಅಸಮಾಧಾನಗೊಂಡಿರುವ ಹಲವು ಶಾಸಕರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಸುದ್ದಿಯಾಗಿತ್ತು. ಈ ಅಸಮಾಧಾನದ ಹೊಗೆ ಮುಂದುವರಿಯುವ ಲಕ್ಷಣಗಳು ಗೋಚರಿಸುತ್ತಿದೆ. ಅಹಂಕಾರದಿಂದ ವರ್ತಿಸುವ ಸಚಿವರಿಂದ ಸ್ವಾಭಿಮಾನಕ್ಕೆ ಧಕ್ಕೆಯಾದರೆ ರಾಜೀನಾಮೆ ನೀಡುವೆ ಎಂದು ಕಾಂಗ್ರೆಸ್ ಪಕ್ಷದ ಆಳಂದ ಶಾಸಕ ಬಿಆರ್ ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುರುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಟೀಲ್ ಅವರು ಮುಖ್ಯಮಂತ್ರಿಗಳ ಬಳಿಯೇ ಅಸಮಾಧಾನ ತೋಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸ್ವಾಭಿಮಾನ ಇಲ್ಲದಿದ್ದರೆ ರಾಜೀನಾಮೆ ನೀಡಿ ಹೋಗುತ್ತೇನೆ. ಸಚಿವರು ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಪಾಟೀಲ್ ಹಾಗೂ ಇತರೆ ಶಾಸಕರು ಸಿಎಲ್‌ಪಿ ಸಭೆ ಕರೆಯುವಂತೆ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಅಸಮಾಧಾನ ವ್ಯಕ್ತಪಡಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲವನ್ನೂ ನಿಯಂತ್ರಿಸುತ್ತಿದ್ದಾರೆ. ತಮ್ಮ ಮೇಲೆ ಮಾತಿಗೆ ಕಡಿವಾಣ ಹಾಕಿದ್ದಾರೆ ಎಂದು ಅವರು ಅಳಲುತೋಡಿಕೊಂಡಿದ್ದಾರೆ.

ತಮಗೆ ಪತ್ರ ಬರೆಯುವ ಅಗತ್ಯವೇನಿತ್ತು ಎಂದು ಸಿದ್ದರಾಮಯ್ಯ ಪ್ರಶ್ನಿಸಿದಾಗ, ಪಾಟೀಲ್ ತಮ್ಮ ಅಭಿಪ್ರಾಯವನ್ನು ಮಂಡಿಸಿದರು ಎಂದು ಮೂಲಗಳು ತಿಳಿಸಿವೆ. ನಮ್ಮಲ್ಲಿ ‘ಆಂತರಿಕ ಪ್ರಜಾಪ್ರಭುತ್ವ’ವಿದೆ ಎಂದು ಅವರು ಹೇಳಿದ್ದಾರೆ. ಪತ್ರ ಸೋರಿಕೆಯಾಗಲು ಕಾರಣವೇನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕರು, ಸೋರಿಕೆಗೆ ನಾನು ಹೊಣೆಯಲ್ಲ, ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಪಾಟೀಲ್ ಅವರಿಗೆ ಶಾಸಕರಾದ ವಿನಯ್ ಕುಲಕರ್ಣಿ, ಸಿಎಸ್ ನಾಡಗೌಡ, ಹಮಪನಗೌಡ ಬಾದರ್ಲಿ, ಯಶವಂತರಾಯಗೌಡ ಪಾಟೀಲ್ ಮತ್ತಿತರರ ಬೆಂಬಲ ಸೂಚಿಸಿದ್ದರು. ಈ ಮಧ್ಯೆ, ಪಾಟೀಲ್ ಅವರು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಲಬುರಗಿ ಜಿಲ್ಲೆಯಲ್ಲಿ ನಿಯೋಜಿಸಿರುವ ಅಧಿಕಾರಿಗಳ ವಿರುದ್ಧವೂ ದೂರು ನೀಡಿದ್ದಾರೆ ಎನ್ನಲಾಗಿದೆ.

Exit mobile version