ನವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರಂದು ನಡೆಯಲಿರುವ ಪ್ರಾಣ ಪ್ರತಿಷ್ಠೆಯ ಸಮಾರಂಭದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ಭಾಗವಹಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ. ರಾಮ ಮಂದಿರ ಹೋರಾಟದ ರೂವಾರಿ ಆಗಿರುವ ಅಡ್ವಾಣಿ, ಅಯೋಧ್ಯೆಯ ಸಮಾರಂಭದಲ್ಲಿ ಭಾಗವಹಿಸುವ ಬಗ್ಗೆ ವಿಹೆಚ್ಪಿ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.
ಅಡ್ವಾಣಿ ಮತ್ತು ಮತ್ತೊಬ್ಬರು ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಅವರ ವಯಸ್ಸು ಮತ್ತು ಆರೋಗ್ಯದ ಸ್ಥಿತಿಯನ್ನು ಪರಿಗಣಿಸಿ ಸಮಾರಂಭಕ್ಕೆ ಹಾಜರಾಗದಂತೆ ಮನವಿ ಮಾಡಲಾಗಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಈ ಹಿಂದೆ ಮಾಧ್ಯಮಗಳಿಗೆ ತಿಳಿಸಿದ್ದರು. ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ನಂತರದಲ್ಲಿ ಉಭಯ ನಾಯಕರ ಮನೆಗೆ ತೆರಳಿ ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿರುವ ಫೋಟೊಗಳು ಪ್ರಕಟಗೊಂಡಿದ್ದವು.
ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಸಾವಿರಾರು ಸಂತರ ಸಮ್ಮುಖದಲ್ಲಿ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ.