Site icon newsroomkannada.com

ನಮ್ಮದೇ ಒರಿಜಿನಲ್ ಜೆಡಿಎಸ್ ಎಂದಿದ್ದ ಸಿ.ಎಂ ಇಬ್ರಾಹಿಂ ಜೆಡಿಎಸ್‌ ನಿಂದ ಉಚ್ಛಾಟನೆ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ನಮ್ಮದೇ ಒರಿಜಿನಲ್ ಜೆಡಿಎಸ್ ಎಂದು ಸ್ವಪಪಕ್ಷದ ವರಿಷ್ಠರ ವಿರುದ್ಧವೇ ಗುಡುಗಿದ್ದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ನಗರದ ಜೆಪಿ ಭವನದಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ, ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ನಾನು ಪ್ರಸ್ತಾಪ ಮಾಡುವುದಿಲ್ಲ. ಅದರ ಅವಶ್ಯಕತೆಯೂ ಇಲ್ಲ, ಜೆಡಿಎಸ್ ಕೋರ್ ಕಮಿಟಿ ಸದಸ್ಯರ ಸಭೆ ಕರೆದು ಚರ್ಚೆ ನಡೆಸಿದ್ದೇವೆ, ಎಲ್ಲರ ಅಭಿಪ್ರಾಯ ಪಡೆದು ಸಿ.ಎಂ.ಇಬ್ರಾಹಿಂ ಉಚ್ಚಾಟಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

ನಮ್ಮದೇ ಒರಿಜಿನಲ್ ಜೆಡಿಎಸ್. ನಾನೇ ಪಕ್ಷದ ರಾಜ್ಯಾಧ್ಯಕ್ಷ ನಾನ್ಯಾಕೆ ಪಕ್ಷ ಬಿಟ್ಟು ಹೋಗಲಿ ಎಂದು ಸಿ.ಎಂ.ಇಬ್ರಾಹಿಂ ಗುಡುಗಿದ್ದರು. ಇಬ್ರಾಹಿಂ ಮಾತಿಗೆ ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕರು ಸಿಡಿಮಿಡಿಗೊಂಡಿದ್ದರು.

ಜೆಡಿಎಸ್ ನಾಯಕರು ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಪಟ್ಟು ಹಿಡಿದಿದ್ದರು. ಅದರಂತೆ ಇದೀಗ ಅಂತಿಮವಾಗಿ ಜೆಡಿಎಸ್​ ಕೋರ್ ಕಮಿಟಿ ಸಭೆಯಲ್ಲಿ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ.

ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಜೆಡಿಎಸ್ ಕೋರ್ ಕಮಿಟಿ ಸದಸ್ಯರ ಸಭೆ ಕರೆದು ಚರ್ಚೆ ನಡೆಸಿದ್ದೇವೆ. ಎಲ್ಲರ ಅಭಿಪ್ರಾಯ ಪಡೆದು ಸಿ.ಎಂ.ಇಬ್ರಾಹಿಂ ಉಚ್ಚಾಟಿಸಿದ್ದೇವೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುಮಾರಸ್ವಾಮಿ ನೇಮಕ ಮಾಡಿದ್ದೇವೆ ಎಂದರು.

Exit mobile version