ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ ಯೋಜನೆ’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಜೂ.11) ಚಾಲನೆ ನೀಡಿದರು.ಇಂದಿನಿಂದ ಮಹಿಳೆಯರು ಬಸ್ ನಲ್ಲಿ ‘ಫ್ರೀ’ಯಾಗಿ ಪ್ರಯಾಣಿಸಬಹುದು.
ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೀಪ ಬೆಳಗುವುದರ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಿದರು.ಇದೇ ವೇಳೆ ಶಕ್ತಿ ಯೋಜನೆಯ ಲೋಗೋ ಮತ್ತು ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಕೂಡ ಬಿಡುಗಡೆ ಮಾಡಲಾಯಿತು. ಐದು ಮಂದಿ ಮಹಿಳೆಯರಿಗೆ ಸಾಂಕೇತಿಕವಾಗಿ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಡಿಸಿಎಂ ಡಿ. ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಸಚಿವರಾದ ಕೆ. ಜೆ. ಜಾರ್ಜ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕರಾದ ರಿಜ್ವಾನ್ ಅರ್ಷದ್, ಗೋವಿಂದರಾಜ್, ಬಿ ಕೆ ಹರಿಪಸ್ರಾದ್, ಯು. ಬಿ. ವೆಂಕಟೇಶ್, ನಾಗರಾಜ್ ಯಾದವ್ ಹಾಗೂ ಎ. ಸಿ. ವೆಂಕಟೇಶ ಉಪಸ್ಥಿತರಿದ್ದರು.
ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರು ಸೇರಿದಂತೆ ಲಿಂಗತ್ವ ಅಲ್ಪಸಂಖ್ಯಾತರು ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಎ.ಸಿ. ಬಸ್ ಮತ್ತು ಐಷಾರಾಮಿ ಬಸ್ಗಳಲ್ಲಿ ಪ್ರಯಾಣಿಸುವಂತಿಲ್ಲ.