ಮಂಗಳೂರು: ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಏ. 2ರ ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜರುಗಿದೆ. ಕೂಡಲೇ ಅವರನ್ನು ನಗರ್ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ.
ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ಅವರು ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ಧತಿ ತಂಡದ ಸದಸ್ಯರಾಗಿದ್ದರು. 2019ರಿಂದ ಬೆಳ್ತಂಗಡಿಯ ಕಡಿರುದ್ಯಾವರ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಇವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾದ ಹಿನ್ನೆಲೆಯಲ್ಲಿ ಕಳೆದ ಫೆಬ್ರವರಿ ಹಾಗೂ ಮಾರ್ಚ್ ನಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು.
ಆತ್ಮಹತ್ಯೆಗೆ ಯತ್ನಿಸಿದ, ಇವರನ್ನು ಕೂಡಲೇ ವೆನ್ ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಹೆಚ್ಚಿನ ನಿಗಾವಣಿಗಾಗಿ ಇವರನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ.
ಇವರ ಪತ್ನಿ ಜಯಂತಿ ಸ್ಟಾಫ್ ನಸ್೯ ಆಗಿ ಬೆಳ್ತಂಗಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಣಧಿಕಾರಿ ಡಾ. ಆನಂದ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಮ್ಮಯ್ಯ, ಜಿಲ್ಲಾ ಪಂಚಾಯತ್ ಲೆಕ್ಕಾಧೀಕ್ಷಕ ಬಾಲು ಡಿ.ಎಂ. ಸೇರಿದಂತೆ ಹಲವು ಅಧಿಕಾರಿಗಳು, ಸಿಬ್ಬಂದಿ ಆಸ್ಪತ್ರೆಯಲ್ಲಿದ್ದು, ಅವರ ಚಿಕಿತ್ಸೆಗೆ ನೆರವಾಗಿದ್ದಾರೆ.
ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಹಾಗೂ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ ಶ್ರೀಧರ ಹೆಗಡೆ ಅವರ ಪತ್ನಿ, ಮಕ್ಕಳು ಹಾಗೂ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ, ಅವರಲ್ಲಿ ಆತ್ಮಸ್ಥೈರ್ಯ ತುಂಬಿದರು ಎಂದು ವಾರ್ತಾ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.