main logo

ಮತ್ತೆ ಕಾಂಗ್ರೆಸ್ ಸೇರಿದ ಜಯಪ್ರಕಾಶ್ ಹೆಗ್ಡೆ ; ಉಡುಪಿ – ಚಿಕ್ಕಮಗಳೂರು ಕ್ಷೇತ್ರಕ್ಕೆ ಅಭ್ಯರ್ಥಿಯಾಗೋದು ಖಚಿತ

ಮತ್ತೆ ಕಾಂಗ್ರೆಸ್ ಸೇರಿದ ಜಯಪ್ರಕಾಶ್ ಹೆಗ್ಡೆ ; ಉಡುಪಿ – ಚಿಕ್ಕಮಗಳೂರು ಕ್ಷೇತ್ರಕ್ಕೆ ಅಭ್ಯರ್ಥಿಯಾಗೋದು ಖಚಿತ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದೇ ಬಿಂಬಿತರಾಗಿರುವ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್‌ ಸೇರಿದರು. ಕ್ಷೇತ್ರದ ಹಾಲಿ ಸಂಸದರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬಿಜೆಪಿಯಿಂದ ಅವರೇ ಅಭ್ಯರ್ಥಿಯೇ? ಎಂಬುದು ಸಹ ಕುತೂಹಲ.
ಮಂಗಳವಾರ ಸಂಜೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸಮ್ಮುಖದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕಾರ್ಯಕ್ರಮದಲ್ಲಿ ಸಚಿವರಾದ ಡಾ. ಜಿ. ಪರಮೇಶ್ವರ, ಕೆ. ಜೆ. ಜಾರ್ಜ್, ಮಧು ಬಂಗಾರಪ್ಪ, ಲಕ್ಷ್ಮೀ ಹೆಬ್ಬಾಳ್ಕರ್,‌ ಶೃಂಗೇರಿ‌ ಶಾಸಕ ರಾಜೇಗೌಡ, ವಿಧಾನ ಪರಿಷತ್ ಸದಸ್ಯ ಯು. ಬಿ. ವೆಂಕಟೇಶ್ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿ?; ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿದ್ದ ಜಯಪ್ರಕಾಶ್ ಹೆಗ್ಡೆ ಮಂಗಳವಾರ ಪುನಃ ಕಾಂಗ್ರೆಸ್‌ ಸೇರಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಗೆ ಅವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂಬ ಸುದ್ದಿ ಇದೆ. ಮತ್ತೊಂದು ಕಡೆ ಅವರನ್ನು ಅಭ್ಯರ್ಥಿ ಮಾಡುವುದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಸುಧೀರ್ ಕುಮಾರ್ ಮುರೊಳ್ಳಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂಬ ಒತ್ತಾಯವಿದೆ.

2009ರ ಕ್ಷೇತ್ರ ಪುನರ್ ವಿಂಗಡನೆ ಬಳಿಕ ಉಡುಪಿ-ಚಿಕ್ಕಮಗಳೂರು ಕ್ಷೇತ್ರ ರಚನೆಗೊಂಡಿತು. 2009ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಜಯಪ್ರಕಾಶ್ ಹೆಗ್ಡೆ ಕಣಕ್ಕಿಳಿದರು. 374,423 ಮತಗಳನ್ನು ಪಡೆದು 401,441 ಮತಗಳನ್ನು ಪಡೆದ ಬಿಜೆಪಿಯ ಡಿ. ವಿ. ಸದಾನಂದ ಗೌಡ ವಿರುದ್ಧ ಸೋಲು ಕಂಡರು. ಸದಾನಂದ ಗೌಡರು ರಾಜ್ಯದ ಮುಖ್ಯಮಂತ್ರಿಯಾದರು. 2012ರಲ್ಲಿ ಕ್ಷೇತ್ರದ ಉಪ ಚುನಾವಣೆ ನಡೆಯಿತು. ಕಾಂಗ್ರೆಸ್‌ನ ಜಯಪ್ರಕಾಶ್ ಹೆಗ್ಡೆ ಗೆದ್ದರು. ಆದರೆ 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಜಯಪ್ರಕಾಶ್ ಹೆಗ್ಡೆ 399,525 ಮತಗಳನ್ನು ಪಡೆದು ಸೋತರು. ಬಿಜೆಪಿಯ ಶೋಭಾ ಕರಂದ್ಲಾಜೆ 581,168 ಮತಗಳನ್ನು ಪಡೆದು ಗೆಲುವು ಸಾಧಿಸಿದರು.

2023ರ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ 5 ಕ್ಷೇತ್ರ ಗೆದ್ದಿರುವ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಗೆಲ್ಲುವ ಉತ್ಸಾಹದಲ್ಲಿದೆ. ಆದ್ದರಿಂದ ಕೆ. ಜಯಪ್ರಕಾಶ್ ಹೆಗ್ಡೆ ಅಭ್ಯರ್ಥಿ ಎಂಬ ಸುದ್ದಿಗಳು ಬಲವಾಗಿ ಹಬ್ಬಿವೆ. ಈ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಮತ್ತು ಕಾಂಗ್ರೆಸ್‌ ಟಿಕೆಟ್‌ ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿಯಲ್ಲಿ ‘ಗೋ ಬ್ಯಾಕ್ ಶೋಭಾ’ ಎಂದು ನಡೆಯುತ್ತಿರುವ ಅಭಿಯಾನದ ಮಾದರಿಯಲ್ಲಿ ಕಾಂಗ್ರೆಸ್‌ನಲ್ಲಿ ‘ಗೋ ಬ್ಯಾಕ್ ಹೆಗ್ಡೆ’ ಎಂಬ ಅಭಿಯಾನ ನಡೆದಿದೆ. ಈಗಾಗಲೇ ಕರ್ನಾಟಕ ಕಾಂಗ್ರೆಸ್ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿಲ್ಲ.

Related Articles

Leave a Reply

Your email address will not be published. Required fields are marked *

error: Content is protected !!