ಮಂಗಳೂರು: ಮಂಗಳೂರಿನ ಅಡ್ಯಾರಿನಲ್ಲಿ ಇಂದು ಕಾಂಗ್ರೆಸ್‌ನ ಬೃಹತ್ ಸಮಾವೇಶ ನಡೆಯಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಸಿಲಿದ್ದಾರೆ. ಮಂಗಳೂರಿಗೆ ವಿಶೇಷ ವಿಮಾನದ ಮೂಲಕ ಆಗಮಿಸಿ, 2.15ಕ್ಕೆ ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಬಿಜೆಪಿ ಮತ್ತು ಹಿಂದುತ್ತದ ಭದ್ರಕೋಟೆಯಾಗಿರುವ ಕರಾವಳಿಯಿಂದಲೇ ಲೋಕಸಭೆ ಚುನಾವಣೆಗೆ ರಣಕಹಳೆ ಮೊಳಗಿಸುವ ಉದ್ದೇಶದಿಂದ ಮಂಗಳೂರಿನಲ್ಲಿ ಕಾಂಗ್ರೆಸ್ ಈ ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದೆ. ಅಡ್ಯಾರ್‌ನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ ಆಯೋಜಿಸಲಾಗಿದ್ದು, ರಾಜ್ಯದೆಲ್ಲೆಡೆಯಿಂದ ಕೈ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಬಳಿಕ ಸಿಎಂ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ 530ಕ್ಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ.ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್‌ನ ಮುಖ್ಯ ಸಚೇತಕರು ಭಾಗವಹಿಸಲಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸುತ್ತಾರೆ ಎಂದು ಹೇಳಲಾಗಿದ್ದರೂ ಅದು ಇನ್ನೂ ಖಾತರಿಯಾಗಿಲ್ಲ. ಚುನಾವಣೆ ತಯಾರಿಯಲ್ಲಿ ಬಹಳ ಬ್ಯುಸಿಯಾಗಿರುವುದರಿಂದ ಖರ್ಗೆಯವರು ಆಗಮಿಸುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಸಮಾವೇಶಕ್ಕೆ ಈಗಾಗಲೇ ಕಾಂಗ್ರೆಸ್ ನಾಯಕರು ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ. ಎಲ್ಲೆಡೆಯಿಂದ ಕಾರ್ಯಕರ್ತರನ್ನು ಕರೆತರಲು ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಉಡುಪಿ, ಬೈಂದೂರು ಭಾಗದಿಂದಲೇ ಸುಮಾರು 300 ಬಸ್‌ಗಳಲ್ಲಿ ಕಾರ್ಯಕರ್ತರು ಆಗಮಿಸಲಿದ್ದಾರೆ.