ಬೆಂಗಳೂರು: ಲೋಕಸಭೆ ಚುನಾವಣೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಸರ್ಕಸ್ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ಹಾಗೂ ಬಿಜೆಪಿಗೆ ವಿಭಿನ್ನ ಸಮಸ್ಯೆ, ಸವಾಲುಗಳು ಬೆನ್ನೇರಲಾರಂಭಿಸಿದೆ. ಆದರೂ ಬಿಜೆಪಿ ಟಿಕೆಟ್ ಹಂಚಿಕೆ ವಿಚಾರ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪುವ ಭೀತಿಯ ಮಧ್ಯೆಯೇ ಕ್ಷೇತ್ರಾಂತರದ ಚರ್ಚೆ ಈಗ ಮುನ್ನೆಲೆಗೆ ಬಂದಿದೆ.
“ಗೋ ಬ್ಯಾಕ್ ಶೋಭಾ’ ಅಭಿಯಾನದ ಹಿನ್ನೆಲೆಯಲ್ಲಿ ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳೆರಡರಲ್ಲೂ ತೀವ್ರ ಮುಜುಗರ ಅನುಭವಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಕೊನೆ ಕ್ಷಣದಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ವರ್ಗಾಯಿಸುವ ಮಹತ್ವದ ನಿರ್ಧಾರವನ್ನು ಬಿಜೆಪಿ ವರಿಷ್ಠರು ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಎಲ್ಲ ಬೆಳವಣಿಗೆಯ ನಡುವೆ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಕೂಡ ಕ್ಷೇತ್ರ ಕಳೆದುಕೊಳ್ಳುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ನಳಿನ್ ಬದಲಿಗೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ| ವೈ.ಭರತ್ ಶೆಟ್ಟಿ ಅಥವಾ ಕ್ಯಾಪ್ಟನ್ ಬೃಜೇಶ್ ಚೌಟ ಅವರಿಗೆ ಟಿಕೆಟ್ ಲಭಿಸುವ ಸಾಧ್ಯತೆ ನಿಚ್ಚಳವಾಗಿದೆ. ಹಾಗೆಯೇ ಉಡುಪಿ ಕ್ಷೇತ್ರಕ್ಕೆ ಕೋಟ ಶ್ರೀನಿವಾಸ ಪೂಜಾರಿ ಅವರ ಹೆಸರು ಕೇಳಿ ಬರುತ್ತಿದೆ.