ಮಂಗಳೂರು: ಮಂಗಳೂರು ಉತ್ತರ ಠಾಣೆ ಹಾಗೂ ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮಾದಕದ್ರವ್ಯ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡಿಸಿಕೊಂಡು ಅವರಿಂದ ಒಟ್ಟು 200 ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಳ್ಳಲಾಗಿದೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ, ಉದ್ಯಾವರ ನಿವಾಸಿಳಾದ ಮೊಹಮ್ಮದ್ ಹನೀಫ್ ಎ.ಎನ್. (47), ಸೈಯದ್ ಫೌಜಾನ್ (30) ಹಾಗೂ ಮಂಜೇಶ್ವರ ಕುಂಜತ್ತೂರು ನಿವಾಸಿ ಸಿರಾಜುದ್ದೀನ್ ಅಬೂಬಕ್ಕರ್ (35) ಬಂಧಿತ ಆರೋಪಿಗಳು.
ಬೆಂಗಳೂರಿನಿಂದ ಎಂಡಿಎಂಎ ಮಾದಕದ್ರವ್ಯವನ್ನು ಖರೀದಿಸಿರುವ ಮೂವರು ಫಳ್ನೀರ್ ನಲ್ಲಿ ಕಾರಿನಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.
ಬಂಧಿತರಿಂದ ಒಟ್ಟು 100 ಗ್ರಾಂ ತೂಕದ 5,00,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ನಗದು ನಾಲ್ಕು ಸಾವಿರ ರೂಪಾಯಿ ನಗದು, ಒಂದು ಮಾರುತಿ ಸ್ವಿಫ್ಟ್ ಕಾರು, ಮೂರು ಮೊಬೈಲ್ ಫೋನುಗಳು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರು. 10,94,500 ಆಗಬಹುದೆಂದು ಅಂದಾಜಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ, ಅಳಪೆ ಗ್ರಾಮದ ಕಂಕನಾಡಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮಾದಕದ್ರವ್ಯ ಎಂಡಿಎಂಎಯನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ, ಮೀಯಪದವು ನಿವಾಸಿ ಇಬ್ರಾಹಿಂ ಅರ್ಷಾದ್ ವಿ.ಕೆ (30) ಬಂಧಿತ ಆರೋಪಿ.
ಆರೋಪಿ ಬಳಿಯಿಂದ ಒಟ್ಟು 100 ಗ್ರಾಂ ತೂಕದ ಒಟ್ಟು 50 ಸಾವಿರ ರೂಪಾಯಿ ಮೌಲ್ಯದ ಎಂಡಿಎಂಎ , ಒಂದು ಸಾವಿರ ರೂಪಾಯಿ ನಗದು, ಒಂದು ಮೊಬೈಲ್ ಫೋನ್ ಹಾಗೂ ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 51 ಸಾವಿರದ ಐದುನೂರು ರೂಪಾಯಿಗಳೆಂದು ಅಂದಾಜಿಸಲಾಗಿದೆ. ಆರೋಪಿಯ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.