ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಒತ್ತಾಯಿಸಿ ಶುಕ್ರವಾರ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.
ಧರ್ಮಸ್ಥಳದಲ್ಲಿ 2012ರ ಅಕ್ಟೋಬರ್ 9ರಂದು ಬೆಳ್ತಂಗಡಿ ತಾಲೂಕಿನ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳನ್ನು ಬರ್ಬರವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು.
ಈ ಪ್ರಕರಣದ ಬಗ್ಗೆ ಹಲವು ರೀತಿಯ ತನಿಖೆ ನಡೆದಿದ್ದು, ಶಂಕಿತ ಆರೋಪಿಯನ್ನು ಇತ್ತೀಚೆಗೆ ಸಿಬಿಐ ನ್ಯಾಯಾಲಯ ದೋಷಮುಕ್ತಗೊಳಿಸಿ ಆದೇಶ ನೀಡಿದೆ.
ಆದರೆ ಕೃತ್ಯವೆಸಗಿದ ತಪ್ಪಿತಸ್ಥರನ್ನು ಕಾನೂನಿನ ಚೌಕಟ್ಟಿನೊಳಗೆ ತಂದು ಶಿಕ್ಷೆ ನೀಡುವಲ್ಲಿ ಆಡಳಿತ ವ್ಯವಸ್ಥೆ ವಿಫಲವಾಗಿದೆ ಎನ್ನುವ ದುಗಡ ಬೆಳ್ತಂಗಡಿ ತಾಲೂಕಿನ ಜನತೆಯಲ್ಲಿದೆ.
ಆದ್ದರಿಂದ ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಕೃತ್ಯವೆಸಗಿದ ಅಪರಾಧಿಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ವಿಧಿಸುವಲ್ಲಿ ಸರ್ಕಾರ ಕ್ರಮಕೈಗೊಳ್ಳಬೇಕು. ಮೃತ ಸೌಜನ್ಯಳ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಬೆಳ್ತಂಗಡಿ ಕ್ಷೇತ್ರದ ಜನಪ್ರತಿನಿಧಿಯಾಗಿ ಒತ್ತಾಯಿಸುತ್ತೇನೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.