ಮಂಗಳೂರು: ಮಂಗಳೂರಿನ ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನದ ಷಷ್ಠಿ ಮಹೋತ್ಸವ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಿರಾಕರಣೆ ಮಾಡಿರುವ ಆರೋಪ ಮಾಡಿರುವ ಘಟನೆ ನಡೆದಿದೆ.
ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನದಲ್ಲಿ ಡಿಸೆಂಬರ್ 14 ರಿಂದ 19 ರವರೆಗೆ ಷಷ್ಟಿ ಮಹೋತ್ಸವ ಜಾತ್ರೆ ಅದ್ಧೂರಿಯಾಗಿ ನಡೆಯಲಿದೆ. ಈ ಷಷ್ಟಿ ಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ಕೋಟ್ಯಂತರ ರೂಪಾಯಿ ವ್ಯವಹಾರ ನಡೆಯುತ್ತದೆ. ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಈ ದೇವಸ್ಥಾನದ ಪ್ರಾಂಗಣದ ಹೊರಗಡೆ ವ್ಯಾಪಾರ ನಡೆಯುತ್ತದೆ. ಆದರೆ ಇದೀಗ ಇಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿಷೇದಿಸಲಾಗಿದೆ.
ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನದ ಆಡಳಿತ ಮಂಡಳಿ ಷಷ್ಟಿ ಸಂತೆ ವ್ಯಾಪಾರದ ಹಂಚಿಕೆ ನಡೆಸಿದೆ. ಈ ವೇಳೆ ಜಾಗ ಕೇಳಲು ಹೋಗಿದ್ದ ಮುಸ್ಲಿಂ ವ್ಯಾಪಾರಿಗಳಿಗೆ ಜಾಗ ಹಂಚಿಕೆಗೆ ನಿರಾಕರಣೆ ಮಾಡಲಾಗಿದೆ. ಬೇಕಾದರೆ ಹಿಂದೂಗಳ ಹೆಸರಿನಲ್ಲಿ ಅಂಗಡಿ ಪಡೆಯುವಂತೆ ಆಡಳಿತ ಮಂಡಳಿ ಸೂಚಿಸಿದೆ.
ಬಡ ಸಂತೆ ವ್ಯಾಪಾರಿಗಳ ಜೊತೆ ನಿಲ್ಲಲಾಗದ ಸರ್ಕಾರಕ್ಕೆ ಧಿಕ್ಕಾರ ಎಂದು ಮುಸ್ಲಿಂ ವ್ಯಾಪಾರಿಗಳು ಕಿಡಿಕಾರಿದ್ದಾರೆ. ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನ ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದೆ. ಆದರೆ ವ್ಯಾಪಾರಕ್ಕೆ ಜಾಗ ಕೇಳಲು ಹೋಗಿದ್ದ ಮುಸ್ಲಿಂ ವ್ಯಾಪಾರಿಗಳಿಗೆ ಜಾಗ ಹಂಚಿಕೆಗೆ ನಿರಾಕರಣೆ ಮಾಡಲಾಗಿದೆ. ಕಳೆದ ಬಾರಿಯೂ ಮುಸ್ಲಿಂ ವ್ಯಾಪಾರಿಗಳಿಗೆ ಕುಡುಪು ದೇವಸ್ಥಾನದಲ್ಲಿ ವ್ಯಾಪಾರ ನಿರಾಕರಣೆ ಮಾಡಲಾಗಿತ್ತು. ಸಂಘಟನೆಗಳ ವಿರೋಧದ ಹಿನ್ನೆಲೆಯಲ್ಲಿ ಮುಸ್ಲಿಮರಿಗೆ ವ್ಯಾಪಾರ ನಡೆಸಲು ಅವಕಾಶ ಕೊಡುತ್ತಿಲ್ಲ ಎಂದು ಬೀದಿ ಬದಿ ವ್ಯಾಪಾರಸ್ಥರು ಆರೋಪಿಸಿದ್ದಾರೆ. ಧರ್ಮ ತಾರತಮ್ಯದ ಬಗ್ಗೆ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯ ಪ್ರವೇಶಿಸಿ ಸಮಸ್ಯೆಗೆ ಪರಿಹಾರ ನೀಡಬೇಕು. ಅಲ್ಲದೇ ನ್ಯಾಯ ನೀಡದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆಗೆ ಆಗ್ರಹಿಸಲಾಗಿದೆ.