ಬೆಂಗಳೂರು: ರಾಜ್ಯದಲ್ಲಿ ದುರ್ಬಲಗೊಂಡಿದ್ದ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು ಜೂನ್ 23 ರಿಂದ 27 ರವರೆಗೆ ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 23 ರಿಂದ ಜೂನ್ 27 ರವರೆಗೆ 64.5 ಮಿ.ಮೀ ನಿಂದ 115.5 ಮಿ.ಮೀ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಜೂನ್ 22 ರಿಂದ ಜೂನ್ 26 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 40-45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.