ಬೆಂಗಳೂರು: ಅಶ್ಲೀಲ ವಿಡಿಯೋ ಮತ್ತು ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಸದಾಶಿವನಗರದ ದೇವೇಗೌಡರ ಮನೆಯಲ್ಲಿ ರೇವಣ್ಣ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಆನಂತರ, ಎಸ್ಐಟಿ ಕಚೇರಿಗೆ ಕರೆತಂದಿದ್ದು, ಪ್ರಾಥಮಿಕ ವಿಚಾರಣೆ ಬಳಿಕ ಕೋರಮಂಗಲದ ನ್ಯಾಯಾಧೀಶರ ಮನೆಯಲ್ಲಿ ಹಾಜರು ಪಡಿಸಿ ಕಸ್ಟಡಿಗೆ ಪಡೆಯುವ ಸಾಧ್ಯತೆಯಿದೆ.
ಮಾಜಿ ಪ್ರಧಾನಿ ದೇವೇಗೌಡರು ರೇವಣ್ಣ ಮತ್ತು ಪ್ರಜ್ವಲ್ ಅವರನ್ನು ಪೊಲೀಸರಿಗೆ ಶರಣಾಗುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ರೇವಣ್ಣ ಸ್ವತಃ ಪೊಲೀಸರ ವಿಚಾರಣೆಗೆ ಸಹಕರಿಸಲು ಮುಂದಾಗಿದ್ದಾರೆ. ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಗೆ ಪುರಸ್ಕಾರ ಸಿಗದೇ ಇದ್ದುದರಿಂದ ಶರಣಾಗಿದ್ದಾರೆ.
ಇದೇ ವೇಳೆ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಅವರಿಗೂ ಶರಣಾಗಲು ದೇವೇಗೌಡರು ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಇನ್ನೆರಡು ದಿನದಲ್ಲಿ ಅವರು ಕೂಡ ಬೆಂಗಳೂರಿಗೆ ಬಂದು ಶರಣಾಗಲಿದ್ದಾರೆ ಎನ್ನಲಾಗುತ್ತಿದೆ. ಇದೇ ವೇಳೆ, ಜೆಡಿಎಸ್ ಶಾಸಕರು ಎಚ್.ಡಿ ರೇವಣ್ಣ ಅವರನ್ನೂ ಪಕ್ಷದಿಂದ ಅಮಾನತು ಮಾಡಬೇಕೆಂಬ ಆಗ್ರಹ ಮುಂದಿಟ್ಟಿದ್ದಾರೆ. ಈ ಬಗ್ಗೆಯೂ ದೇವೇಗೌಡರು ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.